ಕರ್ನಾಟಕದಾದ್ಯಂತ ಇನ್ನೊಂದು ವಾರ ಭಾರೀ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾ., ಬೆಂ. ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ. ಗಾಳಿ ಗಂಟೆಗೆ 40 ಕಿ.ಮೀನಿಂದ 50 ಕಿ.ಮೀವರೆಗೂ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ಕೆಲವಡೆ ಮಳೆಯಾಗಲಿದೆ
ಮನೆಯ ಛಾವಣಿ ಕುಸಿತ
ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಹೆಬ್ಬಲಕುಪ್ಪೆ ಗ್ರಾಮದಲ್ಲಿ ಇದ್ದಕ್ಕಿದ್ದಂತೆ ಮನೆಯ ಛಾವಣಿ ಕುಸಿತವಾಗಿದೆ. ಗೋವಿಂದ ಶೆಟ್ಟಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯೊಳಗೆ ಸಿಲುಕಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಧಾ, ರೋಹಿತ್ ಮತ್ತು ದೊಡ್ಡಮ್ಮ ಎಂಬುವವರನ್ನು ರಕ್ಷಿಸಲಾಗಿದೆ. ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ.
ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ನಡುವೆ, ಕೊಡಗು ಜಿಲ್ಲೆಯಲ್ಲಿ ನಾಳೆ ವ್ಯಾಪಕ ಮಳೆ-ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 7 ರಂದು) ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. SSLC ಪರೀಕ್ಷೆ-3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.