ದಾವಣಗೆರೆ : ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮವಹಿಸಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಜಿ. ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ “ಬಾಲ್ಯವಿವಾಹ ನಿಷೇದಾಧಿಕಾರ ಮತ್ತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ – 2012ರ” ಕುರಿತು ಆಯೋಜಿಸಲಾದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಬಾಲ್ಯವಿವಾಹ ಪ್ರಕರಣಗಳು ಗ್ರಾಮೀಣ ಭಾಗದಲ್ಲೇ ಹೆಚ್ಚಾಗಿದ್ದು, ಇದಕ್ಕೆ ಪ್ರಮುಖ ಕಾರಣ ಶಿಕ್ಷಣದ ಕೊರತೆ. ಬಾಲ್ಯವಿವಾಹ ಮಾಡುವುದರಿಂದ ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುವುದಲ್ಲದೇ ತಾಯಿ ಮತ್ತು ಶಿಶು ಮರಣ ದರ ಉಂಟಾಗಲಿದೆ. ಆದ್ದರಿಂದ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸುರಕ್ಷತಾ ಕುರಿತು ಶಿಕ್ಷಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಇಲಾಖೆ ವತಿಯಿಂದ ಮತ್ತಷ್ಟು ಜಾಗೃತಿ ಮೂಡಿಸಬೇಕು ಎಂದರು.
ಮಹಿಳೆಯರು ಪ್ರಸ್ತುತ ಹಲವಾರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ಯಶಸ್ಸನ್ನು ಕಾಣುತ್ತಿದ್ದಾರೆ. ಅದಕ್ಕೆ ಸೂಕ್ತ ಉದಾಹರಣೆ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಇದೆಲ್ಲವೂ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ಶಿಕ್ಷಣ ಮಹತ್ವ ಸಾರುವ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಂತೆ ಪೋಷಕರಿಗೂ ಅರಿವು ಮೂಡಿಸಿ, ಪ್ರೋತ್ಸಾಹಿಸಬೇಕು. ಆದರೂ ಬಾಲ್ಯವಿವಾಹ, ಪೋಕ್ಸೋ ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಕಂಡು ಬಂದಲ್ಲಿ ಅಧಿಕಾರಿಗಳು ತಂಡೋಪ ತಂಡವಾಗಿ ತುರ್ತಾಗಿ ಕಾರ್ಯಪ್ರವೃತ್ತರಾಗಿ ಸಂಬಂಧಪಟ್ಟವರ ಮೇಲೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಬೇಕು ಎಂದರು,
ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ಅತ್ಯಂತ ಕಠಿಣವಾಗಿದ್ದು, ಇಂತಹ ಪ್ರಕರಣಗಳಲ್ಲಿ ಸಿಲುಕಿದವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಹಾಗಾಗಿ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಈ ಮೂಲಕ ಪ್ರತಿಯೊಬ್ಬರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದರಿಂದ ಗಣನೀಯವಾಗಿ ಪ್ರಕಣಗಳ ಸಂಖ್ಯೆ ತಗ್ಗಿಸಲು ಸಾಧ್ಯ ಎಂದರು.
Read also : ಗುರುಕಾರುಣ್ಯ ಒಂದಿದ್ದರೆ ಸಾಕು ಜೀವನ ಸಾರ್ಥಕ : ಗಾಯಕಿ ಸಂವೇದಿತಾ ಸುಭಾಷ್
ಜಿಲ್ಲಾದ್ಯಂದ ಕಳೆದ ವರ್ಷ 75 ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ 7 ಪ್ರಕರಣಗಳಿಗೆ ಎಫ್‌ಐರ್ ದಾಖಲಿಸಲಾಗಿದ್ದು, ಇನ್ನೂ 2 ಪ್ರಕರಣ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದು ತಡೆಯಲಾಗಿದೆ. ಬಾಲ್ಯವಿವಾಹ ಮಾಡುವುದು ಕಾನೂನು ಬಾಹಿರ ಎಂದು ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಾಗೆಯೇ ಜಿಲ್ಲೆಯಲ್ಲಿ 98 ಪೋಕ್ಸೊ ಪ್ರಕರಣ ದಾಖಲಾಗಿವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದರು.
ಕೊಪ್ಪಳದ ಯುನಿಸೆಫ್ ಸಂಸ್ಥೆ ಸಂಯೋಜಕ ರಾಘವೇಂದ್ರ ಭಟ್ “ಬಾಲ್ಯವಿವಾಹ ನಿಷೇದಾಧಿಕಾರ ಮತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ – 2012ರ” ಕುರಿತು ಉಪನ್ಯಾಸ ನೀಡಿದರು.
ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಯ್ಕ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಷಣ್ಮುಖಪ್ಪ, ಡಿವೈಎಸ್ಪಿ ಶರಣಬಸವ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.