ದಾವಣಗೆರೆ : ಬರುವ ಸೆಪ್ಟೆಂಬರ್ ನಲ್ಲಿ ಮನೆ ಮನೆ ಸಮೀಕ್ಷೆ ಕೈಗೊಂಡು ಪ್ರತಿಯೊಂದು ವರ್ಗದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶ ಸಂಗ್ರಹಿಸುವ ಕೆಲಸವನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರೊಳಗಾಗಿ ಪೂರ್ಣಗೊಳಿಸಲ ಜಿಲ್ಲಾ ಪಂಚಾಯತ್ ಸಿ.ಇ.ಓ ಗಿತ್ತೆ ಮಾಧವ್ ವಿಠ್ಠಲ್ ರಾವ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ನಡೆಸಲು ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮನೆ ಹಾಗೂ ಅರಣ್ಯ ಪ್ರದೇಶದಲ್ಲಿ ನೆಲೆಸಿರುವ, ದೇವದಾಸಿ ಹೀಗೆ ಯಾವುದೇ ಒಬ್ಬ ವ್ಯಕ್ತಿ ಆಗಲಿ, ಕುಟುಂಬವಾಗಲಿ ಸಮೀಕ್ಷೆಯಿಂದ ತಪ್ಪಿಸಿಕೊಳ್ಳದಂತೆ ಜಾಗೃತವಾಗಿ ಎಚ್ಚರಿಕೆಯಿಂದ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸಮೀಕ್ಷೆ ವೇಳೆ ತರಾತುರಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು, ಗೊಂದಲಗಳು ಉಂಟಾದಂತೆ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು, ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ. ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗಿದೆ. 1 ರಿಂದ 8 ನೇ ತರಗತಿ ಶಿಕ್ಷಕರು ಈ ಸಮೀಕ್ಷೆ ಕಾರ್ಯವನ್ನು ಮಾಡಬೇಕು. ಬಿ.ಆರ್.ಸಿ ಮತ್ತು ಸಿ.ಆರ್.ಸಿ ಯವರು ಮೇಲ್ವಿಚಾರಕರನ್ನಾಗಿ ನೇಮಕ ಮಾಡಬೇಕು. 17 ದಿನಗಳಲ್ಲಿ ಈ ಸಮೀಕ್ಷೆ ಕಾರ್ಯ ಪೂರ್ಣ ಆಗಬೇಕು ಎಂದು ಸೂಚನೆ ನೀಡಿದರು.
Read also : ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಮಾತನಾಡಿ, ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಣ ಇಲಾಖೆ ಜೊತೆಗೆ ಅಗತ್ಯವಿದ್ದಲ್ಲಿ ವಿವಿಧ ಇಲಾಖೆಗಳ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರನ್ನು ಸಹ ಈ ಸಮೀಕ್ಷೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಅಭಿಷೇಕ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಡಿಡಿಪಿಐ ಕೊಟ್ರೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.