ದಾವಣಗೆರೆ ನ.15: ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದು, ಉತ್ತಮ ಬೆಲೆ ದೊರೆಯದ ಕಾರಣ ರೈತರಿಂದ ವರ್ತಕರು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿದ್ದಾರೆ. ಬೆಲೆ ಕುಸಿತ ತಪ್ಪಿಸಲು ಬೆಂಬಲ ಯೋಜನೆಯಡಿ ಮೆಕ್ಕೆಜೋಳ ಖರೀದಿಗೆ ಆದೇಶಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಟಾಸ್ಕ್ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ರೈತರು ಮೆಕ್ಕೆಜೋಳ ಬೆಳೆದಿದ್ದು, ಈಗಾಗಲೇ ಬೆಳೆ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಮಾರುಕಟ್ಟೆಗಳಲ್ಲಿ ಪ್ರಸ್ತುತ ದರವು ರೂ.1500 ರಿಂದ 2150ರ ವರೆಗೆ ಇದ್ದು, ಸರಾಸರಿ ರೂ.1900 ಮೆಕ್ಕೆಜೋಳ ದರದಲ್ಲಿ ಮಾರಾಟವಾಗುತ್ತಿದೆ. ಈ ದರವು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗಧಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ ದರಕ್ಕಿಂತ ಕಡಿಮೆ ಇರುತ್ತದೆ.
Read also : ಮಹಾನಗರ ಪಾಲಿಕೆ – ಸುಯೆಜ್ ಕಂಪನಿಯ ಸಹಯೋಗದಲ್ಲಿ ತ್ಯಾಜ್ಯ ಸಂಗ್ರಹಣಾ ಅಭಿಯಾನ
ಮುಂಬರುವ ದಿನಗಳಲ್ಲಿ ಮಾರುಕಟ್ಟೆಗೆ ಮತ್ತಷ್ಟು ಆವಕವಾಗುವ ನಿರೀಕ್ಷೆ ಇದ್ದು, ಮತ್ತಷ್ಟು ಬೆಲೆ ಕುಸಿತವಾಗಬಹುದು. ರೈತರ ಹಿತದೃಷ್ಟಿಯಿಂದ ತೊಂದರೆಯಾಗದಂತೆ ಜಿಲ್ಲೆಯ ಎಲ್ಲಾ ಎಪಿಎಂಸಿ ಮಾರುಕಟ್ಟೆಗಳಲ್ಲಿ ಅಗತ್ಯತೆಗೆ ತಕ್ಕಂತೆ ಖರೀದಿ ಕೇಂದ್ರ ಸ್ಥಾಪಿಸಲು ಸರ್ಕಾರದ ಅನುಮತಿ ಕೇಳಲಾಗಿದೆ ಎಂದು ಅವರು ತಿಳಿಸಿದರು.
