ದಾವಣಗೆರೆ- ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದು, ಮಿತಿಮೀರಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಒತ್ತಾಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಸರ್ಕಾರ ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಆದರೆ ನಮ್ಮ ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ.೧೫ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ. ಪೋಷಕರು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆಯಿಂದಾಗಿ ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯಾ? ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಖಾಸಗಿ ಶಾಲೆಗಳಿಗೆ ಶುಲ್ಕ ನಿಗಧಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂಬುದಾಗಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದಕ್ಕೆ ಹೈಕೋರ್ಟ್ ಮುಂದೆ ಸರ್ಕಾರ ಸಮರ್ಪಕ ವಾದ ಮಂಡಿಸದಿರುವುದೇ ಕಾರಣ. ರಾಜ್ಯ ಸರ್ಕಾರವು ಖಾಸಗಿ ಶಾಲೆಗಳೊಂದಿಗೆ ಕೈಜೋಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ಶುಲ್ಕ ದಂಧೆಯಿಂದ ಪೋಷಕರನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ವಸೂಲಿಗೆ ಶುಲ್ಕ ನಿಯಂತ್ರಣ ಪ್ರಾಧಿಕಾರವು ತಡೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸಭೆ ಕರೆದು, ನ್ಯಾಯಾಲಯದ ಆದೇಶದ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪಕ್ಷದ ಮುಖಂಡರಾದ ಆದಿಲ್ ಖಾನ್, ರವೀಂದ್ರ, ಸುರೇಶ್ ಸಿಡ್ಲಪ್ಪ, ಧರ್ಮನಾಯ್ಕ, ಹಾಲಸ್ವಾಮಿ, ಚನ್ನಬಸಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.