ದಾವಣಗೆರೆ (Davanagere): ಲಿಂ. ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ 38ನೇ ವರ್ಷದ ಸ್ಮರಣೋತ್ಸವ ಮತ್ತು ಲಿಂ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ 13ನೇ ವರ್ಷದ ಪುಣ್ಯರಾಧನೆ ಅಂಗವಾಗಿ ಜನಜಾಗೃತಿ ಧರ್ಮ ಸಮ್ಮೇಳನ ಕಾರ್ಯಕ್ರಮವನ್ನು ನವಂಬರ್ 4, 5 ಮತ್ತು 6ರಂದು ಮೂರು ದಿನಗಳ ಕಾಲ ಇಲ್ಲಿನ ನಗರದ ಶ್ರೀಶೈಲ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿದಿನ ಸಂಜೆ 6ಕ್ಕೆ ನಡೆಯುವ ಭಾವೈಕ್ಯ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಶ್ರೀಶೈಲ ಮಹಾಮಠದ ಡಾ. ಚೆನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನ. 4ರಂದು ಕಾರ್ಯಕ್ರಮದಲ್ಲಿ ರಾಮಘಟ್ಟದ ರಾಜಗುರು ಪುರವರ್ಗ ಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.
ಮುಷ್ಟೂರು ಓಂಕಾರ ಹುಚ್ಚನಾಗಲಿಂಗ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಲೆಕ್ಕಪರಿಶೋಧಕ ಡಾ. ಎಸ್ ಅಥಣಿ ವೀರಣ್ಣ, ಶಾಸಕ ಬಿ.ಪಿ ಹರೀಶ್, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಜಿಲ್ಲಾಧಿಕಾರಿ ಜಿ.ಎಂ ಗಂಗಾಧರ ಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ದೂಡ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಪಾಲಿಕೆ ಸದಸ್ಯ ಎ. ನಾಗರಾಜ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ವೀರಶೈವ ಧರ್ಮವನ್ನು ಪೋಷಿಸಿದ ರಾಜ ಮನೆತನಗಳ ವಿಷಯ ಕುರಿತು ಬೆಳಗಾವಿಯ ವಿಶ್ರಾಂತ ಪ್ರಾಧ್ಯಾಪಕ ಸಿ.ಜಿ ಮಠಪತಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬಾಮ ಬಸವರಾಜ್ ಅವರಿಗೆ ಜೀವಮಾನ ಸಾಧನೆಗೆ ಡಾಕ್ಟರ್ ಲಲಿತಮ್ಮ ಚಂದ್ರಶೇಖರ್ ಇವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ನ.5 ರಂದು ನಡೆಯುವ ಕಾರ್ಯಕ್ರಮದಲ್ಲಿ ಉಜ್ಜಯಿನಿ ಮಹಾಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮತ್ತು ಶ್ರೀಶೈಲ ಪೀಠದ ಡಾ. ಚನ್ನ ಸಿದ್ದರಾಮಯ್ಯ ಪಂಡಿತಾರಾಧ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಜೈನಪುರ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಮಾಜಿ ಸಚಿವ ಡಾ. ಜಿ.ಎಂ ಸಿದ್ದೇಶ್ವರ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಮಾಜಿ ಅಧ್ಯಕ್ಷ ದೇವರಮನೆ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಬಾಳೆಕುಂದ್ರಿ ಅವರು ಆರೋಗ್ಯ ಮತ್ತು ಆಧ್ಯಾತ್ಮದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ನ. 6 ರಂದು ನಡೆಯುವ ಕಾರ್ಯಕ್ರಮದಲ್ಲಿ ಮಳೆ ಹಿರೇಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬಸವನ ಬಾಗೇವಾಡಿಯ ಡಾ. ಒಡೆಯರ್ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮಠದ ವೀರಭದ್ರಯ್ಯ ಅವರು ಸಮಾಜ ಮತ್ತು ಪಂಚಪೀಠಗಳ ಮಹತ್ವದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಅಂದು ಬೆಳಿಗ್ಗೆ 8 ಗಂಟೆಗೆ ನಗರದ ದಾವಣಗೆರೆ ಹರಿಹರ ಅರ್ಬನ್ ಸಹಕಾರಿ ಸಮುದಾಯ ಭವನದಲ್ಲಿ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಪೂಜೆ, ಹೂವಿನ ಅಲಂಕಾರ ಮತ್ತು ದೀಕ್ಷಾ ಕಾರ್ಯಕ್ರಮ ನಡೆಯಲಿದ್ದು, ಉಭಯ ಜಗದ್ಗುರುಗಳ ರಜತ ಮೂರ್ತಿಗಳ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.