ದಾವಣಗೆರೆ (Davanagere ) ಜು.30 : ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಎಲ್ಲ ಇಲಾಖೆಗಳು ಸೇರಿ ಒಗ್ಗಟಿನಿಂದ ಕೆಲಸ ಮಾಡಬೇಕು, ಅಂದಾಗ ಮಾತ್ರ ಈ ಕೃತ್ಯವನ್ನು ಹತೋಟಿ ತರಲು ಸಹಾಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ.ಜಿ.ಎಂ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ (World Day Against Human Trafficking) ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಶೋಷಣೆ ಪ್ರಕರಣಗಳ ಅಪರಾಧಿಗಳಿಗೆ ಕಾನೂನು ಬಹಳ ಕಠಿಣವಾಗಿದೆ. ದೇಶದಲ್ಲಿ ಪ್ರಜೆಗಳಿಗೆ ಅನೇಕ ಕಾಯ್ದೆ ಕಾನೂನುಗಳಿವೆ, ಅವುಗಳ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ದೇಶದಲ್ಲಿನ ಬದಲಾದ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ.
ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಕೌನ್ಸಿಲಿಂಗ್ ಮಾಡಬೇಕು. ಪೋಕ್ಸೊ ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕು. ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಬಡತನದಲ್ಲಿರುವ ಹೆಣ್ಣು ಮಕ್ಕಳಿಗೆ ಹಣದ ಸಹಾಯ ಅಗತ್ಯವಿರುತ್ತದೆ, ಇದರಿಂದ ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು. ಮಕ್ಕಳನ್ನು ಪೋಷಕರು ತುಂಬಾ ಜಾಗೃತೆಯಿಂದ ಬೆಳೆಸಬೇಕು. ಮಕ್ಕಳಿಗೆ ಯಾವುದು ಸರಿ, ಯಾವುದು ತಪ್ಪು ಎಂಬ ವಿಚಾರಗಳನ್ನು ತಿಳಿಸಿಕೊಡಬೇಕು ಎಂದರು.
ವಿಶ್ವ ಮಾನವ ಕಳ್ಳ ಸಾಗಾಣಿಕೆಯ ದಿನಾಚರಣೆ (Global Report on Trafficking in Persons (GLOTIP) ಯ ಅಂಗವಾಗಿ ಪ್ರತಿಜ್ಞಾವಿಧಿ ಭೋಧಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ, ವಿಶ್ವಮಾನವ ಕಳ್ಳ ಸಾಗಾಣಿಕೆಗೆ ಅನೇಕ ಕಾರಣಗಳಿವೆ. ಅದರಲ್ಲಿ ಪ್ರಮುಖವಾಗಿ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವುದು, ಅಂಗಾಂಗ ಮಾರಾಟ, ಬಾಲ ಕಾರ್ಮಿಕ, ಬಾಲ್ಯ ವಿವಾಹ ಪದ್ಧತಿಗಳು ಕಾರಣವಾಗುತ್ತವೆ. ಇದನ್ನೆಲ್ಲಾ ತನಿಖೆ ಮಾಡಿ, ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.
Read also : Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ
ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು, ಜೊತೆಗೆ ಕಾಳಜಿಯುತವಾಗಿ ಕೆಲಸ ನಿರ್ವಹಿಸಬೇಕು. ಮಕ್ಕಳಿಗೆ ಸದ್ಗುಣ, ಸಂಪ್ರದಾಯ ಹೇಳಬೇಕು ಎಂದು ಹೇಳಿದ ಅವರು ಮಕ್ಕಳ ಅಪಹರಣ ಹಾಗೂ ಮಾರಾಟ ದೊಡ್ಡ್ಡ ಮಾಫಿಯಾ ಆಗಿ ಬೆಳೆಯುತ್ತಿದೆ. ಈ ಕುರಿತು ಪಾಲಕರು ಹಾಗೂ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮಾಹಿತಿ ನೀಡಿ ಕಾರ್ಯಕ್ರಮಗಳ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ರಾಮನಾಯ್ಕ, ಆರೋಗ್ಯ ಇಲಾಖೆಯ ಅಧಿಕಾರಿ ಸುರೇಶ ಬಾರ್ಕಿ ಉಪಸ್ಥಿತರಿದ್ದರು.