ದಾವಣಗೆರೆ .ಜೂ.19 : ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಆಚರಿಸಲಾಗುತ್ತಿದ್ದು 5 ರಿಂದ 6 ಸಾವಿರ ಜನರು ಭಾಗಿಯಾಗಿ ಯೋಗಾಸನ ಮಾಡುವ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು 195 ದೇಶಗಳಲ್ಲಿ ಆಚರಿಸಲಾಗುತ್ತಿದೆ. ಈ ದಿನ ಪ್ರಕಾಶಮಾನದ ಸಮಯ ಹೆಚ್ಚಾಗಲಿದ್ದು ಹಗಲು ಹೆಚ್ಚು ರಾತ್ರಿ ಕಡಿಮೆಯಾಗುವ ದಿನ ಇದಾಗಿದ್ದು ಹೆಚ್ಚು ಅವಧಿಯಲ್ಲಿ ಪ್ರಕಾಶಮಾನವಾಗಿರಲು ಈ ದಿನವನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದರು.
ಯೋಗ ಎಂಬುದು ಭಾರತದ ಪ್ರಾಚೀನ, ಪಾರಂಪರಿಕ, ಆಧ್ಯಾತ್ಮಿಕ ಪದ್ದತಿಯಾಗಿದ್ದು ಇದರಿಂದ ಭೌದ್ದಿಕ ಅಭಿವೃದ್ದಿ, ಮಾನಸಿಕ ಸಮತೋಲನ, ಸಮಚಿತ್ತತೆ ಕಾಪಾಡಲು ಸಹಕಾರಿಯಾಗಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕೆಂದು ಮತ್ತು ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವುದು ಯೋಗ ದಿನದ ಪ್ರಮುಖ ಉದ್ದೇಶವಾಗಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಹೈಸ್ಕೂಲ್ ಮೈದಾನದಲ್ಲಿ ಜೂನ್ 21 ರಂದು ಬೆಳಗ್ಗೆ 5.30 ರಿಂದ ಧ್ಯಾನದೊಂದಿಗೆ ಆರಂಭವಾಗಲಿದೆ. ಬೆಳಗ್ಗೆ 6.30 ರಿಂದ 7 ರವರೆಗೆ ಕಾರ್ಯಕ್ರಮದ ಉದ್ಘಾಟನೆ ಮತ್ತು ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಾಮಾನ್ಯ ಯೋಗ ಶಿಷ್ಠಾಚಾರ ಬೆ.7 ರಿಂದ 7.45 ರವರೆಗೆ ನಡೆಯಲಿದೆ.
ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು, ತಪೋವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜು, ಎನ್.ಸಿ.ಸಿ, ಎನ್.ಎಸ್.ಎಸ್, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ; ಯೋಗೇಂದ್ರಕುಮಾರ್ ಬಿ.ಯು, ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ಉಪಸ್ಥಿತರಿದ್ದರು.