ದಾವಣಗೆರೆ ಜೂ.11 : ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನ ಸಿದ್ದತೆ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದು 10 ನೇ ಅಂತರಾಷ್ಟ್ರೀಯ ಯೋಗ ದಿನವಾಗಿದ್ದು ವಿಶೇಷವಾಗಿ ಆಚರಿಸಲಾಗುತ್ತಿದೆ. ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಯೋಗ ಸಂಸ್ಥೆಗಳ ಸಹಕಾರದಲ್ಲಿ ಆಚರಿಸಲಾಗುತ್ತಿದೆ ಎಂದರು.
ಯೋಗ ದಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 5 ರಿಂದ 6 ಗಂಟೆಯವರೆಗೆ ಬ್ರ್ರಹ್ಮಕುಮಾರಿ ಈಶ್ವರಿಯ ವಿಶ್ಯವಿದ್ಯಾನಿಲಯದಿಂದ ಧ್ಯಾನ, ಬೆ.6 ರಿಂದ 6.40 ರವರೆಗೆ ವೇದಿಕೆ ಕಾರ್ಯಕ್ರಮ, 6.40 ಯಿಂದ 7.30 ವರೆಗೆ ಯೋಗ ಕಾರ್ಯಕ್ರಮ ಇರುತ್ತದೆ. ಈ ಕಾರ್ಯಕ್ರಮದಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ಪ್ರತಿನಿಧಿಗಳನ್ನು ಪಾಲ್ಗೊಳ್ಳುವಂತೆ ಮಾಡಲು ಯೋಜಿಸಲಾಗಿದೆ ಎಂದರು.
ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ|| ಯೋಗೇಂದ್ರಕುಮಾರ್ ಬಿ.ಯು. ಅವರು ಯೋಗ ದಿನದ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ದುರ್ಗಶ್ರೀ, ಉಪಕಾರ್ಯದರ್ಶಿ ಕೃಷ್ಣನಾಯ್ಕ, ಡಿಡಿಪಿಐ ಕೊಟ್ರೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯಸ್ಥರು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಯೋಗಾಸಕ್ತ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.