ದಾವಣಗೆರೆ (Davanagere): ರಕ್ತದಾನ ಶ್ರೇಷ್ಠವಾದದ್ದು, ಆರೋಗ್ಯವಂತ ವಿದ್ಯಾರ್ಥಿಗಳು ಕನಿಷ್ಠ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡುವುದು ಉತ್ತಮ, ಇದರಿಂದ ರಕ್ತದ ಅನಿವಾರ್ಯತೆ ಇರುವವರ ಪ್ರಾಣ ರಕ್ಷಣೆಗೆ ಸಹಕಾರಿಯಾಗಲಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಸಲಹೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಘಟಕ, ವಿದ್ಯಾನಗರ ರೋಟರಿ ಕ್ಲಬ್, ಹೆಚ್‍ಡಿಎಫ್‍ಸಿ ಬ್ಯಾಂಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಆಸ್ಪತ್ರೆ ರಕ್ತ ಭಂಡಾರದ ಸಹಯೋಗದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ರಕ್ತವನ್ನು ಬಡವರು, ಗರ್ಭಿಣಿಯರು ಹಾಗೂ ತುರ್ತು ಪರಿಸ್ಥಿತಿಯಲ್ಲಿರುವವರಿಗೆ ಬಳಕೆಯಾಗಬೇಕು. ರಕ್ತದಾನದ ಕುರಿತು ವಿದ್ಯಾರ್ಥಿಗಳಲ್ಲಿ ಅಡಗಿರುವ ಭಯವನ್ನು ದೂರ ಮಾಡಿ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಜನಪರ ಕಾಳಜಿ, ಮತ್ತು ಆರೋಗ್ಯದ ಬಗ್ಗೆ ಪ್ರಾಯೋಗಿಕವಾಗಿ ತಿಳಿವಳಿಕೆ ನೀಡುವುದು ರಕ್ತದಾನದ ಆಶಯವಾಗಿದೆ ಎಂದು ಹೇಳಿದರು.
ರಕ್ತದಾನದ ಹೆಸರಿನಲ್ಲಿ ಕೆಲವು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ರಕ್ತವನ್ನು ಮಾರಾಟ ಮಾಡುತ್ತಿದ್ದ ಆರೋಪಗಳು ಕೇಳಿ ಬಂದಿದ್ದವು ಆದ್ದರಿಂದ ಅಂತಹ ಸಂಸ್ಥೆಗಳಿಗೆ ಅವಕಾಶ ನೀಡದೆ ಆರೋಗ್ಯ ಇಲಾಖೆ, ರೋಟರಿಯಂತಹ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ, ಇಲ್ಲಿ ಸಂಗ್ರಹಿಸಿದ ರಕ್ತವನ್ನು ಬಡವರು, ದುರ್ಬಲರಿಗೆ ಚಿಗಟೇರಿ ಆಸ್ಪತ್ರೆಯ ಮೂಲಕ ವಿತರಿಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಚಿಗಟೇರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಗೀತಾ.ಡಿ.ಹೆಚ್ ಮಾತನಾಡಿ, ಪುರುಷರು ಮೂರು ತಿಂಗಳಿಗೊಮ್ಮೆ, ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮೂವರ ಪ್ರಾಣ ರಕ್ಷಣೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ರಕ್ತದಾನ ಮಾಡುವವರಿಗೆ ದೇಹದಲ್ಲಿ ಹಳೆ ರಕ್ತ ಹೋಗಿ ಹೊಸ ರಕ್ತ ಉತ್ಪತ್ತಿಯಾಗುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ, ರಕ್ತದೊತ್ತಡ ಹಾಗೂ ಪಾಶ್ರ್ವವಾಯುವಿನಂತಹ ಕಾಯಿಲೆಗಳಿಂದ ಮುಕ್ತರಾಗಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ.ಎಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ರೋಟರಿ ಕ್ಲಬ್‍ನ ಅಧ್ಯಕ್ಷ ಎಸ್.ಎನ್.ಮಳವಳ್ಳಿ ಮಾತನಾಡಿದರು.
ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ.ಅಶೋಕ್‍ಕುಮಾರ್ ವೀ ಪಾಳೇದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಡಾ.ಸಿದ್ದಪ್ಪ ಕಕ್ಕಳಮೇಲಿ ಕಾರ್ಯಕ್ರಮ ನಿರೂಪಿಸಿದರು, ಹೆಚ್‍ಡಿಎಫ್‍ಸಿ ಬ್ಯಾಂಕ್ ಅಧಿಕಾರಿ ಪ್ರಕಾಶ್ ಗುಡಿಯಾರ ವಂದಿಸಿದರು.
Read also : Harihara | ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಡಿಎಸ್‍ಎಸ್ ಮನವಿ