ದಾವಣಗೆರೆ (Davanagere ) : ಭೂಮಿ ತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ ನೀಡುತ್ತದೆ, ಇದೇ ಸ್ಥಾನ ಹೆಣ್ಣು ಮಕ್ಕಳಿಗಿದ್ದು ಹೆಣ್ಣು ಮಕ್ಕಳ ಶಿಕ್ಷಣ, ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ. ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಾಗಿದ್ದ ಜಿಲ್ಲಾ ಮಟ್ಟದ ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಐ.ಸಿ.ಡಿ.ಎಸ್ ಸೇವೆಗಳು ಹಾಗೂ ಇಲಾಖಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಕುರಿತು ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರದ ಉದ್ಘಾಟನೆ ನೇರವರಿಸಿ ಮಾತನಾಡಿದರು.
ಮಗು ತಾಯಿಯ ಗರ್ಭದಲ್ಲಿರುವಾಗ ಮತ್ತು ನಂತರ ಬೆಳವಣಿಗೆಯಾಗಲು ತಾಯಿಯ ಆರೈಕೆ ಅತ್ಯಗತ್ಯವಾಗಿದೆ. ಈ ಹಂತದಲ್ಲಿ ತಾಯಿಗೆ ಪೌಷ್ಟಿಕ ಆಹಾರ ಬಹಳ ಮುಖ್ಯವಾಗಿರುತ್ತದೆ. ಮಗು ಹುಟ್ಟುವ ಮುನ್ನ, ನಂತರದ ಬೆಳವಣಿಗೆ ಹಾಗೂ ತನ್ನ ವಿದ್ಯಾಭ್ಯಾಸ ಮಾಡಲು ತಾಯಿಯ ಶ್ರಮ ಸಾಕಷ್ಟಿರುತ್ತದೆ. ಎಲ್ಲಾ ಹಂತದಲ್ಲಿ ತಾಯಿ ಶ್ರಮ ಸಾಕಷ್ಟಿದ್ದು ಇದಕ್ಕಾಗಿಯೇ ಹೆಣ್ಣು ಮಕ್ಕಳ ಸಂರಕ್ಷಣೆ, ವಿದ್ಯಾಭ್ಯಾಸ ಮಾಡಿಸುವ ಮೂಲಕ ಕುಟುಂಬದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
Read also : Davanagere news | ಹರಿಹರ ನಗರಸಭೆಗೆ ಪ್ರಶಸ್ತಿ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕುವಲ್ಲಿ ಬಹು ಮುಖ್ಯ ಕಾರ್ಯವನ್ನು ನಿಭಾಯಿಸುತ್ತಿದೆ. ಅದೇ ರೀತಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ವಿರುದ್ಧ ಹೋರಾಡುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ಆದ್ದರಿಂದ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಕೆ.ಎಸ್, ಹಾಗೂ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.