ದಾವಣಗೆರೆ (Davanagere) : ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಇಬ್ಬರು ನಕಲಿ ವೈದ್ಯರಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಲಾ ಲಕ್ಷ ರೂ ದಂಡ ವಿಧಿಸಿದ್ದಾರೆ.
ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ಲಿಂಗಾಪುರದ ಗ್ರಾಮದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ಎಂದು ಪರವಾನಗಿ ಪಡೆದು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನಲೆಯಲ್ಲಿ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ಒಂದು ಲಕ್ಷ ದಂಡ ವಿಧಿಸಲಾಗಿದೆ.
Read also : Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ
ಹಿರೇಕೇರೂರು ತಾಲ್ಲೂಕಿನ ಹಿರೇಮರಬ ಗ್ರಾಮದ 45 ವರ್ಷದ ಲಕ್ಷ್ಮಣ ಬಿನ್ ಫಕ್ಕೀರಪ್ಪ ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ಬಸವನಗೌಡ ಎಂಬುವರಿಂದ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದಾರೆ. ತಪಾಸಣೆ ವೇಳೆ ಬಿಇಎಂಎಸ್ ಪ್ರಮಾಣ ಪತ್ರ ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದು ಇದು ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.
ಈ ನಕಲಿ ಕ್ಲಿನಿಕ್ ಗಳ ಬಗ್ಗೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಅಭಿಷೇಕ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್ ಸ್ಥಳ ಮಹಜರು ಮಾಡಿ ಸಮಗ್ರ ವರದಿ ನೀಡಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿಯೊಂದಿಗೆ ಕ್ರಮಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದರು.