ದಾವಣಗೆರೆ: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗದಂತೆ ಸೂಕ್ತ ಕ್ರಮ ವಹಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಛೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಸ್ಥಳೀಯ ಸಂಸ್ಥೆಗಳೊಂದಿಗೆ ಆರೋಗ್ಯ ಇಲಾಖೆ ಸಹಭಾಗಿತ್ವ ವಹಿಸಿ ಸೊಳ್ಳೆಗಳನ್ನು ಹತೋಟಿ ತರಲು ಕಾರ್ಯಕ್ರಮ ರೂಪಿಸಿ ಎಂದು ತಿಳಿಸಿದರು.
ಡೆಂಗ್ಯೂ ಜ್ವರದ ತೀವ್ರ ಸ್ವರೂಪವನ್ನು ಡೆಂಗ್ಯೂ ಹೆಮರಾಜಿಕ್ ಜ್ವರ ಎಂದೂ ಕರೆಯುತ್ತಾರೆ, ಇದು ಗಂಭೀರ ರಕ್ತಸ್ರಾವ, ರಕ್ತದೊತ್ತಡದಲ್ಲಿ ಹಠಾತ್ ಕುಸಿತ (ಆಘಾತ) ಮತ್ತು ಸಾವಿಗೆ ಕಾರಣವಾಗಲಿದ್ದು, ಇದಕ್ಕೆ ಸಂಬಂಧಪಟ್ಟಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಸಂಶೋಧಕರು ಡೆಂಗ್ಯೂ ಜ್ವರ ಲಸಿಕೆಗಳ ಮೇಲೆ ಕೆಲಸ ಮಾಡುತ್ತಿದ್ದು, ಲಸಿಕೆ ಬರುವವರೆಗೂ ಸದ್ಯಕ್ಕೆ, ಡೆಂಗ್ಯೂ ಜ್ವರ ಸಾಮಾನ್ಯವಾಗಿರುವ ಪ್ರದೇಶಗಳಲ್ಲಿ, ಸೊಳ್ಳೆಗಳಿಂದ ಕಚ್ಚುವುದನ್ನು ತಪ್ಪಿಸುವುದು ಮತ್ತು ಸೊಳ್ಳೆಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವುದು ಸೋಂಕನ್ನು ತಡೆಗಟ್ಟಲು ಉತ್ತಮ ಮಾರ್ಗವಾಗಿದ್ದು ಈ ಬಗ್ಗೆ ಆರೋಗ್ಯ ಅಧಿಕಾರಿಗಳು ಗಮನ ಹರಿಸಬೇಕೆಂದರು.
ತೀವ್ರವಾದ ಡೆಂಗ್ಯೂ ಜ್ವರವು ಜೀವಕ್ಕೆ ಅಪಾಯಕಾರಿ ವೈದ್ಯಕೀಯ ತುರ್ತುಸ್ಥಿತಿಯಾಗಿದ್ದು ಈ ಬಗ್ಗೆ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದರು.
ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಷಣ್ಮುಖಪ್ಪ ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.