ದಾವಣಗೆರೆ :
ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಗಾಯತ್ರಿ ಸಿದ್ದೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ನಡೆದ ಸಿದ್ದೇಶ್ವರ್-ರವೀಂದ್ರನಾಥ್ ಬಣದ ಮಧ್ಯೆ ನಡೆದ ಸಂಧಾನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಎರಡು ಗಂಟೆ ಕಾಲ ಎಲ್ಲರ ಭಾವನೆಗಳನ್ನು ತಿಳಿದುಕೊಳ್ಳುವ ಕೆಲಸ ಮಾಡಿದ್ದೇವೆ. ಗಾಯತ್ರಿ ಸಿದ್ದೇಶ್ವರ್ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂಬ ಸಂದೇಶ ನೀಡಿದ್ದೇವೆ. ಯಾವುದೇ ಷರತ್ತು ಇಲ್ಲದೆ, ಸರ್ವಾನುಮತದಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ನಿರ್ಣಯಿಸಲಾಗಿದೆ.
ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ನೇತೃತ್ವದಲ್ಲೇ ಇಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ನಮ್ಮಲ್ಲಿ ಯಾವುದೇ ರೀತಿಯ ಒಡಕಿನ ಮಾತುಗಳಿಗೆ ಅವಕಾಶ ಇಲ್ಲ. ಆಲ್ ಈಸ್ ವೆಲ್. ಎಲ್ಲವೂ ಒಳ್ಳೆಯದಾಗಿದೆ ಎಂದರು.
ಸಭೆಯಲ್ಲಿ ಮಾಜಿ ಸಚಿವರಾದ ಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಜಿ. ಕರುಣಾಕರರೆಡ್ಡಿ, ಮಾಜಿ ಶಾಸಕ ಗುರುಸಿದ್ಧನಗೌಡ, ಮಾಜಿ ಎಂಎಲ್‌ಸಿ ಡಾ.ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ್, ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್, ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್, ಕಲ್ಲೇಶ್ ಇತರರಿದ್ದರು.