ದಾವಣಗೆರೆ. ಏ.26 (Davanagere); ರೈತಬಾಂಧವರು ಹಾಗೂ ಪಶುಪಾಲಕರು ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಬೇಕೆಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು.
ದಾವಣಗೆರೆಯ ಗೃಹಕಚೇರಿಯಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಯೋಜನೆಯಡಿಯಲ್ಲಿ 7 ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕೆ ಕಾರ್ಯಕ್ರಮಕ್ಕೆ ತಮ್ಮ ನಿವಾಸದಲ್ಲಿರುವ ಗೋವುಗಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಸಂಸದರು ಕಾಲುಬಾಯಿ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು. ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ ಲಸಿಕೆ ಹಾಕಿಸುವುದು ಉತ್ತಮ ಎಂದು ಸಲಹೆ ನೀಡಿದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣಕಾರ್ಯಕ್ರಮದಡಿಯಲ್ಲಿ ದಾವಣಗೆರೆ ಜಿಲ್ಲೆಗೆ ಕಾಲುಬಾಯಿ ರೋಗ ಲಸಿಕೆಯು ಕೇಂದ್ರ ಸರ್ಕಾರದಿಂದ ಸರಬರಾಜಾಗಿದ್ದು, ಈ ರೋಗದ ವಿರುದ್ದ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ನೀಡುವ ಲಸಿಕಾ ಕಾರ್ಯಕ್ರಮವನ್ನು ಏ.26 ರಿಂದ ಜೂನ್ 09 ರವರೆಗೆ ಹಮ್ಮಿಕೊಳ್ಳಲಾಗಿದೆ. ರೈತ ಬಾಂಧವರು ಹಾಗೂ ಪಶುಪಾಲಕರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.
Read also : ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಬಿ. ಆರ್. ಅಂಬೇಡ್ಕರ್ ಗೆ ಅಪಮಾನ ಮಾಡಿದಂತೆ: ಜಿ. ಬಿ. ವಿನಯ್ ಕುಮಾರ್
ಪ್ರತಿ ಜಾನುವಾರುವಿಗೆ ಪ್ರತ್ಯೇಕ ಸಿರಿಂಜ್ ಮತ್ತು ನೀಡಲ್ಗಳನ್ನು ಬಳಸಲಾಗುವುದು ಹಾಗೂ ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ನಿಮ್ಮ ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ.ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಮಾಹಿತಿ ಇಲಾಖಾ ವೆಬ್ ಸೈಟ್ WWW.ahvs.kar.in ನಲ್ಲಿ ಲಭ್ಯವಿದೆ.ಲಸಿಕಾ ಅಭಿಯಾನದ ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುಪಾಲನಾ ಇಲಾಖೆಯ ಪಶು ಆಸ್ಪತ್ರೆ ಅಥವಾ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದರು.
ರೈತರು ನಿಮ್ಮ ಗ್ರಾಮಕ್ಕೆ ಭೇಟಿ ನೀಡುವ ಲಸಿಕಾ ಸಿಬ್ಬಂದಿಯೊಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು