ದಾವಣಗೆರೆ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಯಾಗಿ ಐವತ್ತು ವರ್ಷಗಳನ್ನು ಪೂರೈಸಿದ್ದು ದಾವಣಗೆರೆಯಲ್ಲಿ ನ. 5 ರಂದು ಸುವರ್ಣ ಮಹೋತ್ಸವ ಆಚರಣೆಗೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಾವೇರಿ ಮತ್ತು ದಾವಣಗೆರೆ ಜಿಲ್ಲೆ ಸೇರಿ ನ.5 ರಂದು ಹೈಸ್ಕೂಲ್ ಮೈದಾನದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗುವುದು. ಈ ವೇಳೆ ಮಂಡಳಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧಪಡಿಸಿಕೊಳ್ಳಬೇಕೆಂದು ಸೂಚಿಸಿದರು.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲ ಜನಸಾಮಾನ್ಯರನ್ನು ತಲುಪುವಂತೆ ಸ್ಥಳೀಯ ಪರಿಸರ ಮಾಲಿನ್ಯ ಸಮಸ್ಯೆಗಳಾದ ಘನ ತ್ಯಾಜ್ಯ ನಿರ್ವಹಣೆ, ಜಲ ಮಾಲಿನ್ಯ ತಡೆ, ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಸಾಗರ್ ಮಿತ್ರ ಅಭಿಯಾನದ ವಿನೋದ ಭೋದನಕರ್ ವಿಶೇಷ ಉಪನ್ಯಾಸ ನೀಡುವರು.
ಮಕ್ಕಳ ನಾಟಕ ಪ್ರದರ್ಶನವನ್ನು ಆಯೋಜಿಸಲು ಕ್ರಮವಹಿಸಬೇಕು. ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿಗಳು, ಪರಿಸರವಾದಿಗಳು, ವಿದ್ಯಾರ್ಥಿಗಳು, ಜನ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳು ಹಾಗೂ ಇತರೆ ಭಾಗಿದಾರರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸುವರ್ಣ ಮಹೋತ್ಸವವನ್ನು ಆರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಈ ಕುರಿತು ಅಧಿಕಾರಿಗಳು ಸಿದ್ಧತೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕೆಂದು ಹೇಳಿದರು.
Read also : ಚೆನ್ನಮ್ಮಳಂತೆ ಮಹಿಳೆಯರು‘ಶೋಷಣೆ’ ವಿರುದ್ಧ ಧ್ವನಿ ಎತ್ತಿ :ಶಾಸಕ ಬಸವಂತಪ್ಪ
ತುಂಗಾಭದ್ರ ನದಿಗೆ ಹೊನ್ನಾಳಿ, ಹರಿಹರ ನಗರ ಪ್ರದೇಶಗಳಿಂದ ಹರಿದು ಬರುವ ಯುಜಿಡಿ ನೀರನ್ನು ತಡೆಯುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುವರು.
ಪ್ರಶಸ್ತಿ: ಪರಿಸರದ ಉಳಿವಿಗಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಲಾಗುವುದು.
ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಡಿಡಿಪಿಐ ಕೊಟ್ರೇಶ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ರಾಜಶೇಖರ್ ಬಸವಲಿಂಗಪ್ಪ, ರವಿಕುಮಾರ್, ಗಿರೀಶ್ ದೇವರಮನೆ, ಡಾ.ಮಂಜಪ್ಪ, ಶ್ರೀಕಾಂತ್ ಉಪಸ್ಥಿತರಿದ್ದರು.
