ಹರಿಹರ: 2024-25ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ (ಟಿಎಸ್ಪಿ) ಕ್ರಿಯಾಯೋಜನೆ ಅನುದಾನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 14,282 ರೂ.ಗಳನ್ನು ವೆಚ್ಚ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ.
ಕಳೆದ ಆರ್ಥಿಕ ವರ್ಷದಲ್ಲಿಯೂ ರಾಜ್ಯ ಸರ್ಕಾರ ನಗರದಲ್ಲಿ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಲ್ಲಿ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿತ್ತು. ಈ ಬಾರಿಯ ಈ ಯೋಜನೆಯ 39,121 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಬಳಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಈ ನಿರ್ದಾರವನ್ನು ಮುಖ್ಯಮಂತ್ರಿ ಹಾಗೂ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸದಸ್ಯರು ಕೈಬಿಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಸಂವಿದಾನದ ಆಶಯದಂತೆ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿ, ಜನಾಂಗದವರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಈ ಅನುದಾನ ಮೀಸಲಿಟ್ಟಿದೆಯೆ ಹೊರತು ಇದು ಯಾವುದೆ ಪಕ್ಷ, ಸರ್ಕಾರದ ಹೃದಯ ವೈಶಾಲ್ಯತೆ, ಕರುಣೆ, ಸಾಮಾಜಿಕ ಚಿಂತನೆಯ ಫಲವಲ್ಲ.
ಸಂವಿಧಾನದ ಆಶಯದಂತೆ ಶೋಷಿತರ ಅಭಿವೃದ್ಧಿಗಾಗಿ ಅನುದಾನ ತೆಗೆದಿರಿಸಿ ನಂತರ ಅದನ್ನು ಅನ್ಯ ಕಾರ್ಯ ಯೋಜನೆಗಳಿಗೆ ಬಳಸುವುದು ಸಂವಿಧಾನಕ್ಕೆ ಬಗೆಯುವ ದ್ರೋಹವಾಗಿದೆ. ಸಾಮಾಜಿಕ ನ್ಯಾಯ ಒದಗಿಸುವ ಘೋಷಣೆ ಮಾಡುವ ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುವುದು ಸರಿಯೆ ಎಂದು ಅವರು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಅನುದಾನ ವರ್ಗಾಯಿಸುವ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಖ್ಯಮಂತ್ರಿರವರೂ ಸೇರಿದಂತೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸದಸ್ಯರನ್ನು ಕಂಡಲ್ಲಿ ಘೇರಾವು ಹಾಕುವ ಆಂದೋಲನವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಗ್ಯಾರಂಟಿ ಇರಲಿ: ಪಂಚ ಗ್ಯಾರಂಟಿ ಯೋಜನೆಗಳು ಎಲ್ಲಾ ವರ್ಗದ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಮುಖ್ಯವಾಹಿನಿಗೆ ಸೇರಿಸಿಕೊಳ್ಳುವ ಉತ್ತಮ ಯೋಜನೆಯಾಗಿದ್ದು ಅದನ್ನು ಮುಂದುವರೆಸಬೇಕು, ಈ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಸಂಗ್ರಹಕ್ಕೆ ರಾಜ್ಯ ಸರ್ಕಾರ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕೆಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸ್ವಾಗತ: ಕಳೆದ ಆರ್ಥಿಕ ವರ್ಷಕ್ಕಿಂತ ಈ ಬಾರಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಗೆ 3,900 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿರುವುದು, ಯುಪಿಎಸ್ಪಿ ತರಬೇತಿ ಪಡೆಯುವ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು 15 ಸಾವಿರ ರೂ.ಗಳಿಗೆ ಏರಿಕೆ ಮಾಡಿರುವುದು, ಸ್ನಾತಕೋತ್ತರ ಶಿಕ್ಷಣದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲು 91 ಕೋಟಿ ರೂ. ಅನುದಾನ ಒದಗಿಸಿರುವುದನ್ನು ಅವರು ಸ್ವಾಗತಿಸಿದ್ದಾರೆ.