ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ.
ಆ ಪೈಕಿ ಈಗಾಗಲೇ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಬಿಡುಗಡೆಯಾಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನರಮನ ಗೆದ್ದಿದೆ. ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ಸುಮಧುರ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಜನಪ್ರಿಯವಾಗುತ್ತಿದೆ. “ಸರಿಗಮಪ” ಖ್ಯಾತಿಯ ಜಸ್ಕರಣ್ ಸಿಂಗ್ ಈ ಹಾಡನ್ನು ಇಂಪಾಗಿ ಹಾಡಿದ್ದಾರೆ. ಹಾಡುಗಳ ಮೂಲಕ ಈಗಾಗಲೇ ಗೆದ್ದಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.
“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ.
ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.