ದಾವಣಗೆರೆ,ಮಾ.೨೬: ಪ್ರತಿಯೊಬ್ಬ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವ ಸಾಧಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ನಗರದ ಬಂಟರ ಭವನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಡಾ.ಪ್ರಭಾ ಮಲ್ಲಿಕಾರ್ಜನ್ ಅವರ ಪರವಾಗಿ ಹಮ್ಮಿಕೊಂಡಿದ್ದ ಪಕ್ಷದ ಜನ ಪ್ರತಿನಿಧಿಗಳು, ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತನ್ನಿ
ವೈಮನಸ್ಸುಗಳನ್ನು ಬದಿಗೊತ್ತಿ ಕೆಲಸ ಮಾಡಿದರೆ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತಂದರೆ ಅವುಗಳನ್ನು ಬಗೆಹರಿಸಲಾಗುವುದು ಎಂದರು.
ಮಾ 28 ರಂದು ಪ್ರಚಾರಕ್ಕೆ ಚಾಲನೆ
ಇದೇ ಮಾ.೨೮ ರಿಂದ ವಿಧಾನಸಭಾ ಕ್ಷೇತ್ರವಾರು ಪ್ರಚಾರಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅಭಿವೃದ್ಧಿ ಮಂತ್ರಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗೋಣ. ಈ ಹಿಂದೆ ನಮ್ಮ ಸರ್ಕಾರ ಇದ್ದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಈಗಿನ ಸರ್ಕಾರದಿಂದ ನಡೆಯುತ್ತಿರುವ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳೊಂದಿಗೆ ಮತ ಕೇಳೋಣ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ಸೌಲಭ್ಯಗಳನ್ನು ಪ್ರತಿ ಮನೆಗೂ ಮುಟ್ಟಿಸಿದೆ. ಆದರೆ ಬಿಜೆಪಿ ಕೇವಲ ಮೋದಿ ಹೆಸರೇಳಿಕೊಂಡು ಅಭಿವೃದ್ಧಿ ಮಾಡದೆ ಜನರಿಗೆ ವಂಚಿಸಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಸತತ ಅನ್ಯಾಯ ಮಾಡಿದೆ ಅಸಮಾಧಾನ ವ್ಯಕ್ತಪಡಿಸಿದರು.
ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮುನ್ನಡೆ
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಂದ ಸಹಾಯ ಪಡೆದವರು ಅವರ ಬೆನ್ನಿಗೆ ನಿಂತು ಚುನಾವಣೆಯಲ್ಲಿ ಕೆಲಸ ಮಾಡಬೇಕು.ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮುನ್ನಡೆಗಳಿಸಿಕೊಡಲಾಗುವುದು ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಕೆಪಿಸಿಸಿ ವಕ್ತಾರ ನಿಖಿತ್ ರಾಜ್, ಅಭ್ಯರ್ಥಿ ಶ್ರೀಮತಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಬಸವರಾಜ್ ಶಿವಗಂಗಾ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಪಿ.ಟಿ.ಪರಮೇಶ್ವರ ನಾಯ್ಕ, ಎಸ್.ರಾಮಪ್ಪ ಮಾತನಾಡಿದರು. ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಪಾಲಿಕೆ ಸದಸ್ಯರಾದ ಎ.ನಾಗರಾಜ್, ಮಾಜಿ ಸದಸ್ಯ ದಿನೇಶ್ ಕೆ.ಶೆಟ್ಟಿ,ಎಸ್.ಮಲ್ಲಿಕಾರ್ಜುನ್,ಮೇಯರ್ ವಿನಾಯಕ್ ಪೈಲ್ವಾನ್,ಕೆ.ಪಿ.ಪಾಲಯ್ಯ, ಅರಸೀಕೆರೆ ಕೊಟ್ರೇಶ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.